Popular Posts

ಸೆ.27 ರಂದು ವಿಷ್ಣುವರ್ಧನ್ ಅಮೃತ ಮಹೋತ್ಸವ ಸಮಾರಂಭ

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಜೀವನ, ಸಾಧನೆ ಮತ್ತು ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಸೆಪ್ಟೆಂಬರ್ 27ರಂದು ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ‘ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ’ ಆಯೋಜಿಸಲಾಗಿದೆ. ಡಾ.ವಿಷ್ಣುವರ್ಧನ್ ಅವರ ವ್ಯಕ್ತಿತ್ವ ಮತ್ತು ಸಾಧನೆಯನ್ನು ಸಂಭ್ರಮಿಸುವ ಕ್ಷಣವದು. ಯಜಮಾನ್ರ 75ನೇ ವರ್ಷಾಚರಣೆಯನ್ನು ಅಮೃತ ಮಹೋತ್ಸವವಾಗಿ ಆಚರಿಸುವ ಮೂಲಕ ಅವರ ಸಾಧನೆಗಳ ಮೇಲೆ ಬೆಳಕು ಚೆಲ್ಲಲು ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸಲು ಇದು ಮಹತ್ವದ ಪ್ರಯತ್ನವಾಗಿದೆ ಎಂದವರು ಹೇಳಿದರು.

ಸುಮಾರು 25 ಸಾವಿರಕ್ಕೂ ಹೆಚ್ಚು ವಿಷ್ಣು ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಕನ್ನಡ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರು ಪಾಲ್ಗೊಳ್ಳಲಿದ್ದಾರೆ.
ದಿನವಿಡೀ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಷ್ಣು ಅವರ ಜೀವನ ಮತ್ತು ಸಾಧನೆ‌ಯ ಪರಿಚಯ ಮಾಡಿಸಲಾಗುವುದು ಎಂದರು.
ನಿರ್ದೇಶಕ ಡಾ.ರಾಜೇಂದ್ರ ಸಿಂಗ್ ಬಾಬು ಮಾತನಾಡಿ, ಡಾ. ವಿಷ್ಣುವರ್ಧನ್ ಅವರ ನೆನಪುಗಳನ್ನು ಸದಾ ಜೀವಂತವಾಗಿಡುವ ಈ ಕಾರ್ಯಕ್ರಮದಲ್ಲಿ ಅವರೊಂದಿಗೆ ಕೆಲಸ ಮಾಡಿದ ಎಲ್ಲ ನಿರ್ದೇಶಕರು, ನಟ-ನಟಿಯರು, ನಿರ್ಮಾಪಕರು ಹಾಗೂ ತಂತ್ರಜ್ಞರನ್ನು ಒಂದೇ ವೇದಿಕೆಗೆ ಕರೆತರಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಹಿರಿಯ ನಟ ಮತ್ತು ಫಿಲಂ ಚೇಂಬರ್ ಉಪಾಧ್ಯಕ್ಷ ಸುಂದರ್ ರಾಜ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಸಮಸ್ತ ಚಿತ್ರರಂಗ ಸಕ್ರಿಯವಾಗಿ ಭಾಗವಹಿಸುವಂತೆ ವಾಣಿಜ್ಯ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.
ಇದೇ ವೇದಿಕೆಯಲ್ಲಿ ‘ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ’ದ ಲೋಗೋ ಬಿಡುಗಡೆ ಮಾಡಲಾಯಿತು.

Leave a Reply

Your email address will not be published. Required fields are marked *